ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಬುಧವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು, ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಮಹದೇವ್ ಮಾತನಾಡಿ ಸರ್ಕಾರದಿಂದ ಆಚರಿಸಲ್ಪಡುವ ರಾಷ್ಟ್ರೀಯ ಹಬ್ಬಗಳು ಹೆಚ್ಚು ಮಹತ್ವಪೂರ್ಣವಾಗಿರಬೇಕಿದ್ದಲ್ಲಿ ಸರ್ಕಾರಿ ಅಧಿಕಾರಿಗಳ ಪರಿಶ್ರಮ ಅತಿ ಮುಖ್ಯವಾಗಿದೆ, ಈ ಸಂಬಂಧ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಸಮಾಲೋಚನೆ ನಡೆಸಿ ಸಿದ್ಧತೆ ಕೈಗೊಳ್ಳಬೇಕು, ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ದಿನದಂದು ನಡೆಯುವ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳು, ಸ್ತಬ್ಧ ಚಿತ್ರಗಳು ಜೊತೆಗೆ ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸುವ ತಂಡಗಳನ್ನು ಸೇರ್ಪಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಗಣ್ಯರನ್ನು ಗುರುತಿಸಿ ಸನ್ಮಾನಿಸುವ ಬಗ್ಗೆ ತಹಸೀಲ್ದಾರ್ ನೇತೃತ್ವದಲ್ಲಿ ಸಮಿತಿ ರಚಿಸಿ ಅರ್ಹರನ್ನು ಆಯ್ಕೆ ಮಾಡುವಂತೆ ತಿಳಿಸಿದರು, ಪೂರ್ವಭಾವಿ ಸಭೆಗೆ ಕಡ್ಡಾಯ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಕೆಲ ಇಲಾಖೆಯ ಅಧಿಕಾರಿಗಳು ಗೈರಾಗಿರುವುದನ್ನು ಕಂಡು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಸೂಚಿಸಿದರು.