ಗ್ರಾಮೀಣ ದಸರಾ ಅಂಗವಾಗಿ ಸೆ.26 ರ ಗುರುವಾರ ಬೆಳಗ್ಗೆ 9 ಗಂಟೆಗೆ ಹರವೆ ಮಲ್ಲರಾಜಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಹಾಗೂ ಸೆ.27 ರ ಶುಕ್ರವಾರ ಪಟ್ಟಣದ ಗೋಣಿಕೊಪ್ಪ ರಸ್ತೆಯ ಜೂನಿಯರ್ ಕಾಲೇಜು ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖಂಡರುಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ಈ ಸಂದರ್ಭ ಶಾಸಕ ಕೆ.ಮಹದೇವ್ ಮಾತನಾಡಿ ಗ್ರಾಮೀಣ ದಸರಾ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ತಾಲೂಕು ಆಡಳಿತದೊಂದಿಗೆ ಸಹಕರಿಸಬೇಕು, ಕಾರ್ಯಕ್ರಮ ಆಚರಣೆಗೆ ಸಮಯದ ಅಭಾವವಿದ್ದು ಸ್ಥಳೀಯ ಗ್ರಾ.ಪಂ ಕಚೇರಿಗಳ ಮೂಲಕ ತಾಲೂಕಿನ ಜನತೆಗೆ ಕಾರ್ಯಕ್ರಮದ ಮಾಹಿತಿ ದೊರಕುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ಹೇಳಿದರು, ದಸರಾ ಅಂಗವಾಗಿ ನಡೆಯುವ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ಸ್ತಬ್ಧ ಚಿತ್ರಗಳು, ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಗ್ರಾಮೀಣ ದಸರಾ ಸಮಿತಿ ಅಧ್ಯಕ್ಷ ರಮೇಶ್ ಕುಮಾರ್ ಮಾತನಾಡಿ ಕಾರ್ಯಕ್ರಮಕ್ಕೆ ಪ್ರಥಮವಾಗಿ ಪಿರಿಯಾಪಟ್ಟಣದಿಂದ ಚಾಲನೆ ನೀಡಲು ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಅವರು ಆಗಮಿಸುತ್ತಿದ್ದು ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕಾರ ನೀಡುವಂತೆ ಕೋರಿದರು.
ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಶ್ವೇತಾ ಎನ್. ರವೀಂದ್ರ, ಇಒ ಡಿ.ಸಿ ಶ್ರುತಿ, ಜಿ.ಪಂ ಸದಸ್ಯ ರಾಜೇಂದ್ರ, ತಾ.ಪಂ ಅಧ್ಯಕ್ಷೆ ಕೆ.ಆರ್ ನಿರೂಪ ರಾಜೇಶ್, ಸದಸ್ಯ ಟಿ.ಈರಯ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.