ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ.ಪ್ರಭಾಕರ್ ಮಾತನಾಡಿ ಅತಿಸಾರ ಭೇದಿಯಿಂದ ಮಕ್ಕಳಲ್ಲಿ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ರೋಟಾ ವೈರಸ್ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಅತಿಸಾರ ಭೇದಿಯಿಂದ ಮಕ್ಕಳಲ್ಲಿ ನಿಶ್ಶಕ್ತಿಯಿಂದಾಗಿ ಬೆಳವಣಿಗೆ ಕುಂಠಿತವಾಗುವುದರಿಂದ ಅಪೌಷ್ಟಿಕತೆ ಮತ್ತಿತರ ಸಮಸ್ಯೆಗಳು ಕಂಡು ಬರುತ್ತಿದ್ದು ಇದನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ನೂತನವಾಗಿ ರೋಟಾ ವೈರಸ್ ಲಸಿಕೆ ಪರಿಚಯಿಸಲಾಗುತ್ತಿದೆ, ಈ ಲಸಿಕೆಯನ್ನು ನವಜಾತ ಶಿಶುಗಳಿಗೆ 6, 10, 14 ನೇ ವಾರಗಳಲ್ಲಿ ನೀಡಲಾಗುವುದು ಇದರಿಂದ ಕಾಯಿಲೆಯನ್ನು ನಿಯಂತ್ರಣಕ್ಕೆ ತರಬಹುದು ಎಂದರು.
ಶಾಸಕ ಕೆ. ಮಹದೇವ್ ಮಾತನಾಡಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಹಲವು ಉಪಯುಕ್ತ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಈ ಯೋಜನೆಗಳು ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿದಲ್ಲಿ ಯೋಜನೆಗಳು ಸಾರ್ಥಕವಾಗಲಿದೆ, ಈ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯ ಮಾಹಿತಿ ತಲುಪಿಸುವ ಕಾರ್ಯ ಸಮರ್ಪಕವಾಗಿ ಮಾಡಬೇಕಿದೆ, ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡುತ್ತಿದ್ದು ಪೋಷಕರು ತಮ್ಮ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸುವಂತೆ ಕೋರಿದರು.
ಈ ಸಂದರ್ಭ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿ. ಆರ್.ನಾಗೇಶ್, ಆಡಳಿತಾಧಿಕಾರಿ ಡಾ. ಶ್ರೀನಿವಾಸ್, ಪುರಸಭಾ ಸದಸ್ಯ ನಿರಂಜನ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ. ಲತಾ, ಆರೋಗ್ಯ ನಿರೀಕ್ಷಕ ಪ್ರಕಾಶ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿಜಯ್, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.