
ಗುರುವಾರ ಒಂದೇ ದಿನ ತಾಲೂಕಿನಲ್ಲಿ ಮೂರು ಕೊರೊನಾ ಸೋಂಕು ಪ್ರಕರಣ ಪತ್ತೆಯಾದ ಹಿನ್ನೆಲೆ ಪಟ್ಟಣದ ತಾಲೂಕು ಆಡಳಿತ ಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಅವರು ಮಾತನಾಡಿದರು, ತಾಲೂಕಿನಲ್ಲಿ ನಡೆಯುವ ಸಭೆ ಸಮಾರಂಭ ಹಾಗು ಅಂತ್ಯಕ್ರಿಯೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸಿ ಅಲ್ಲಿ ಭಾಗವಹಿಸುವ ಹೊರಗಿನವರ ಬಗ್ಗೆ ಸ್ಥಳೀಯ ಅಧಿಕಾರಿಗಳು ಮಾಹಿತಿ ಕಲೆ ಹಾಕಿ ಸೋಂಕಿನ ಬಗ್ಗೆ ಜಾಗೃತಿ ವಹಿಸಿ ಈ ವಿಚಾರದಲ್ಲಿ ತಾಲೂಕಿನ ಎಲ್ಲ ಇಲಾಖೆಗಳು ತಾಲೂಕು ಆಡಳಿತಕ್ಕೆ ಸಂಪೂರ್ಣ ಸಹಕಾರ ನೀಡಬೇಕು, ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾ.ಪಂ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚು ಸಕ್ರಿಯರಾಗಿ ಜನರಿಗೆ ಜಾಗೃತಿ ಮುಗಿಸುವಂತೆ ಸೂಚಿಸಿದರು.
ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ ಮಾತನಾಡಿ ಕೊರೊನಾ ಸೋಂಕಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು, ತಾಲೂಕಿನ ಎಲ್ಲ ಇಲಾಖೆ ಅಧಿಕಾರಿಗಳು ತಮ್ಮ ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಕಡ್ಡಾಯ ಮಾಸ್ಕ್ ಧರಿಸುವಿಕೆ ಮತ್ತು ಸಮುದಾಯದ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಿದರು.
ಸ್ವಯಂ ಪ್ರೇರಿತ ಲಾಕ್ ಡೌನ್: ಪಿರಿಯಾಪಟ್ಟಣ ತಾಲೂಕಿನಾದ್ಯಂತ ಜು.27 ರಿಂದ ಜಾರಿಗೆ ಬರುವಂತೆ ಅಗತ್ಯ ವಸ್ತುಗಳಾದ ಔಷಧಿ ಮತ್ತು ಹಾಲಿನ ಅಂಗಡಿ ಹೊರತುಪಡಿಸಿ ಮಿಕ್ಕ ಎಲ್ಲ ವರ್ತಕರು ತಮ್ಮ ವ್ಯಾಪಾರ ವಹಿವಾಟನ್ನು ಬೆಳಿಗ್ಗೆ 7ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ನಡೆಸಿ ನಂತರ ಬಂದ್ ಮಾಡುವಂತೆ ಶಾಸಕ ಕೆ.ಮಹದೇವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು, ಕಳೆದ ಕೆಲ ದಿನಗಳ ಹಿಂದೆ ಪಟ್ಟಣದ ವರ್ತಕರು ಸ್ವಯಂಪ್ರೇರಿತ ಲಾಕ್ ಡೌನ್ ಗೆ ಬೆಂಬಲ ಸೂಚಿಸಿ ಸಭೆ ನಡೆಸಿ ತೀರ್ಮಾನ ಕೈಗೊಂಡಿದ್ದರು. ಸಭೆಯಲ್ಲಿ ಶಿರಸ್ತೇದಾರ್ ಶಕೀಲಾ ಬಾನು, ತಾ.ಪಂ ಸಹಾಯಕ ನಿರ್ದೇಶಕ ರಘುನಾಥ್, ತಾಲೂಕು ಆರೋಗ್ಯಾಧಿಕಾರಿ ಡಾ.ವಿ.ಆರ್ ನಾಗೇಶ್, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಜೆ ಶ್ರೀನಿವಾಸ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ಪ್ರಭು, ಪುರಸಭಾ ಮುಖ್ಯಾಧಿಕಾರಿ ಚಂದ್ರಕುಮಾರ್, ಎಡಿಎಲ್ಆರ್ ಚಿಕ್ಕಣ್ಣ, ಸರ್ಕಲ್ ಇನ್ಸ್ ಪೆಕ್ಟರ್ ಬಿ.ಆರ್ ಪ್ರದೀಪ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿದ್ದೇಗೌಡ, ಬಿಸಿಎಂ ವಿಸ್ತರಣಾಧಿಕಾರಿ ಮೋಹನ್, ಅಬಕಾರಿ ಇಲಾಖೆ ನಿರೀಕ್ಷಕ ಧರಣಿಕುಮಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.