ತಾಲ್ಲೂಕಿನ ಕೊಪ್ಪ ಗ್ರಾಮದಿಂದ ಗೋಲ್ಡನ್ ಟೆಂಪಲ್ ಗೆ ಹೋಗುವ ರಸ್ತೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೇತುವೆ ಕಾಮಗಾರಿ, ಆವರ್ತಿ ಗ್ರಾಮದ ಬಳಿ ಬೆಳೆ ಹಾನಿ ಪ್ರದೇಶ, ದೊಡ್ಡಹೊನ್ನೂರು ಹಾಗೂ ಬೈಲಕುಪ್ಪೆ ಗ್ರಾಮದಲ್ಲಿ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಾಯಿತು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಮಾತನಾಡಿ ಹಾನಿಗೊಳಗಾದ ಸ್ಥಳಗಳ ಸಮೀಕ್ಷೆ ನಡೆಸಿ ವರದಿ ಬಂದ ನಂತರ ಸಂಪೂರ್ಣ ಹಾನಿಗೊಳಗಾದ ಮನೆಗಳಿಗೆ 5 ಲಕ್ಷ ರೂ, ಭಾಗಶಃ ಹಾನಿಗೊಳಗಾದ ಮನೆಗಳಿಗೆ 3 ಲಕ್ಷ ರೂ ಹಾಗೂ ಸ್ವಲ್ಪ ಪ್ರಮಾಣದ ಹಾನಿಗೊಳಗಾದ ಮನೆಗಳಿಗೆ 50 ಸಾವಿರ ರೂ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿರುವುದಾಗಿ ತಿಳಿಸಿದರು.
ಶಾಸಕ ಕೆ.ಮಹದೇವ್ ಅವರು ತಾಲ್ಲೂಕಿನಲ್ಲಿ ಉಂಟಾಗಿರುವ ಮನೆಹಾನಿಗೆ ಪರಿಹಾರ ಮತ್ತು ಹಾಳಾಗಿರುವ ರಸ್ತೆಗಳ ದುರಸ್ತಿಗಾಗಿ ಅನುದಾನ ಹಾಗೂ ತಾಲ್ಲೂಕಿನ 2021 – 2022 ನೇ ಸಾಲಿನ ನೆರೆ ಸಂತ್ರಸ್ಥರ ಪುನರ್ವಸತಿ ಕಾರ್ಯಕ್ರಮ ಯೋಜನೆಯಡಿ ಅನುಮೋದನೆಯಾಗಿರುವ ಎ ಮತ್ತು ಬಿ ವರ್ಗದ ಫಲಾನುಭವಿಗಳ ಖಾತೆಗೆ ಅನುದಾನ ಬಿಡುಗಡೆ ಮಾಡುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿ.ಪಂ ಸಿಇಒ ಮಂಜುಳಾ, ಉಪವಿಭಾಗಾಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್, ತಹಸೀಲ್ದಾರ್ ಕೆ.ಚಂದ್ರಮೌಳಿ, ತಾ.ಪಂ ಇಒ ಸಿ.ಆರ್ ಕೃಷ್ಣಕುಮಾರ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಎಂ.ಎಂ ರಾಜೇಗೌಡ, ಜಿಲ್ಲಾ ಉಪಾಧ್ಯಕ್ಷ ಅಣ್ಣಪ್ಪ, ಕೊಪ್ಪ ಗ್ರಾ.ಪಂ ಅಧ್ಯಕ್ಷ ರೇಣುಕಸ್ವಾಮಿ, ವಿವಿಧ ಇಲಾಖೆ ಅಧಿಕಾರಿಗಳು ಸ್ಥಳೀಯ ಜನಪ್ರತಿನಿಧಿಗಳು ಇದ್ದರು.
